ಒಟ್ಟು 950 ಕಡೆಗಳಲ್ಲಿ , 1 ವಚನಕಾರರು , 945 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮನೆಯ ಸುಡುತಿಹ ಬೆಂಕಿಯುರಿಯನಾರಿಸೆ ನುಗ್ಗು |ಮನವ ಸುಡುವುರಿಯಿಂದ ದೂರ ನೀಂ ನಿಲ್ಲು ||ತನುವಿಗುಪಕೃತಿಗೆಯ್ವ ಭರದಿ ನೀನಾತುಮದ |ಅನುನಯವ ಕೆಡಿಸದಿರು - ಮಂಕುತಿಮ್ಮ ||
ಮನೆಯೆ ಮಠವೆಂದು ತಿಳಿ; ಬಂಧು ಬಳಗವೆ ಗುರುವು |ಅನವರತಪರಿಚರ್ಯೆಯವರೊರೆವ ಪಾಠ ||ನಿನಗುಳಿದ ಜಗವ ಮುಟ್ಟಿಪ ಸೇತು ಸಂಸಾರ |ಮನಕೆ ಪುಟಸಂಸ್ಕಾರ - ಮಂಕುತಿಮ್ಮ ||
ಮನೆಯೆಲ್ಲಿ ಸತ್ಯಕ್ಕೆ? ಶ್ರುತಿ ತರ್ಕಮಾತ್ರದೊಳೆ? |ಅನುಭವಮುಮದರೊಂದು ನೆಲೆಯಾಗದಿಹುದೇಂ? ||ಮನು{ಜ}ಹೃದಯಾಂಗಣದೊಳೆನಿತೆನಿತೊ ದನಿಯುದಿಸಿ |ಅಣಕಿಪುವು ತರ್ಕವನು - ಮಂಕುತಿಮ್ಮ ||
ಮನೆಯೊಳೋ ಮಠದೊಳೋ ಸಭೆಯೊಳೋ ಸಂತೆಯೊಳೊ |ಕೊನೆಗೆ ಕಾಡೊಳೊ ಮಸಾಣದೊಳೊ ಮತ್ತೆಲ್ಲೋ ||ಗಣನೆಗೇರಲಿಕೆಂದು ಜನ ತಪಿಸಿ ತೊಳಲುವುದು |ನೆನೆಯದಾತ್ಮದ ಸುಖವ - ಮಂಕುತಿಮ್ಮ ||
ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ ವಿ- |ಸ್ತರಿಸುವಂದದಿ; ಸೃಷ್ಟಿ ತನ್ನ ಮೂಲವನು ||ಮರೆಮಾಚಿ ತಾನೆ ಮೆರೆಯುತ್ತಿಹುದು ಕಣ್ಗಳಿಗೆ |ನೊರೆ ಸೃಷ್ಟಿ ಪಾಲ್ ಬ್ರಹ್ಮ - ಮಂಕುತಿಮ್ಮ ||
ಮರಣದಿಂ ಮುಂದೇನು? ಪ್ರೇತವೋ? ಭೂತವೋ? |ಪರಲೋಕವೋ? ಪುನರ್ಜನ್ಮವೊ? ಅದೇನೋ! ||ತಿರುಗಿ ಬಂದವರಿಲ್ಲ; ವರದಿ ತಂದವರಿಲ್ಲ |ಧರೆಯ ಬಾಳ್ಗದರಿನೇಂ? - ಮಂಕುತಿಮ್ಮ ||
ಮರಣಶಯ್ಯೆಯದೆಂದು ತಿಳಿದೊಡಂ ರೋಗಿಯನು |ಹರಣಮಿರುವನ್ನೆಗಂ ಪರಿಚರಿಸುವಂತೆ ||ಸ್ಥಿರವಲ್ಲವೀ ಲೋಕವಾದೊಡಮದುಳ್ಳನಕ |ಚರಿಸು ನೀನಾಳಾಗಿ - ಮಂಕುತಿಮ್ಮ ||
ಮರವ ನೀನರಿಯುವೊಡೆ ಬುಡವ ಕೀಳಲುಬೇಡ |ತರಿಯಬೇಡೆಲೆಕಡ್ಡಿಗಳ ಪರೀಕ್ಷಣಕೆ ||ಎರೆ ನೀರ; ಸುರಿ ಗೊಬ್ಬರವ; ಕೆದಕು ಪಾತಿಯನು |ನಿರುಕಿಸುತ ತಳಿರಲರ - ಮಂಕುತಿಮ್ಮ ||
ಮರುಕದುಂಬಿದ ಕಣ್ಣನೋಟದೊಳಗಿದ್ದೀತು |ಬಿರುನುಡಿಯೊಳಿರದೊಂದು ಕೂರಲಗು; ಸಖನೆ ||ಕರವಾಳಕದಿರದಿಹ ದುರಿತಕಾರಿಯ ಹೃದಯ |ಕರುಣೆಯಿಂ ಕರಗೀತೊ - ಮಂಕುತಿಮ್ಮ ||
ಮರೆತಿಹನೆ ಬೊಮ್ಮ? ಮರೆತಿಲ್ಲ; ಮರೆತವೊಲಿಹನು |ಧರಿಸಿ ಜೀವಾಕೃತಿಯ ಜಗದಿ ತನ್ನನೆ ತಾನ್ ||ಅರಸಿಕೊಳುವವೊಲಿಹುದು; ದೊರೆತವೋಲ್ ತೋರೆ ಸುಖ |ದೊರೆವವರೆಗಾಯಸವೊ - ಮಂಕುತಿಮ್ಮ ||
ಮಲಗಿದೋದುಗನ ಕೈಹೊತ್ತಗೆಯು ನಿದ್ದೆಯಲಿ |ಕಳಚಿ ಬೀಳ್ವುದು; ಪಕ್ವಫಲವಂತು ತರುವಿಂ ||ಇಳೆಯ ಸಂಬಂಧಗಳು ಸಂಕಲ್ಪನಿಯಮಗಳು |ಸಡಿಲುವುವು ಬಾಳ್ ಮಾಗೆ - ಮಂಕುತಿಮ್ಮ ||
ಮಲೆಕಣಿವೆಗಳ ಬೆರಗು ಪ್ರಕೃತಿಕೋಪದ ಗುಡುಗು |ಕೆಳೆಯೊಲವು ನಲ್ಲೆಯ ವಿಯೋಗವಿಂತಹವು ||ನಿಲಿಸಿ ಮನದೋಟವನು ಮೂಕಗೊಳಿಪುವುವೆನ್ನ |ನೊಳದನಿಯದೊಂದರಿಂ - ಮಂಕುತಿಮ್ಮ ||
ಮಳೆಗೊಂದು ಬೆಳೆಗೊಂದು ಫಲಕೊಂದು ಋತುವಂತೆ |ಬೆಳೆಯಿಪುದು ಜೀವವೃಕ್ಷವ ಕಾಲನಿಯತಿ ||ತಿಳಿವುಮೊಳ್ತನಮುಂ ವಿರಕ್ತಿಯುಂ ಮುಕ್ತಿಯುಂ |ಗಳಿಗೆ ಸರಿಸೇರ್ದಂದು - ಮಂಕುತಿಮ್ಮ ||
ಮಾತೆವೊಲೊ ಪಿತನವೊಲೊ ಪತಿಯವೊಲೊ ಸತಿಯವೊಲೊ |ಭ್ರಾತಸುತಸಖರವೊಲೊ ಪಾತ್ರವೊಂದಕೆ ತಾಂ ||ಕಾತರಿಸುತಿಹುದು ತನ್ನೆಲ್ಲವನು ಮುಡುಪುಕುಡೆ |ಪ್ರೀತಿಯಾ ಹುಚ್ಚು ಚಟ - ಮಂಕುತಿಮ್ಮ ||
ಮಾನವರೊ ದಾನವರೊ ಭೂಮಾತೆಯನು ತಣಿಸೆ |ಶೋಣಿತವನೆರೆಯುವರು ಬಾಷ್ಪ ಸಲುವುದಿರೆ? ||ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ |ಸೌನಿಕನ ಕಟ್ಟೆಯೇಂ? - ಮಂಕುತಿಮ್ಮ ||