ಒಟ್ಟು 946 ಕಡೆಗಳಲ್ಲಿ , 1 ವಚನಕಾರರು , 945 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸತತಮಾರ್ಗಣೆ; ಸಿದ್ಧಿಯಂತಿರಲಿ; ಮಾರ್ಗಣೆಯೆ |ಗತಿ ಮನುಜಲೋಕಕ್ಕೆ; ಜಗದ ಜೀವವದು ||ಕೃತಕಾಮರೆಲ್ಲರಾದೊಡೆ ಕೃತ್ಯವುಳಿಯದೊಡೆ |ಕಥೆ ಮುಗಿವುದಲ ಜಗಕೆ? - ಮಂಕುತಿಮ್ಮ ||
ಸತ್ತವೆನ್ನಾಶೆಗಳು; ಗೆದ್ದೆನಿಂದ್ರಿಯಗಣವ |ಚಿತ್ತವಿನ್ನಲುಗದೆಂಬಾ ಜಂಬ ಬೇಡ ||ಎತ್ತಣಿಂದಲೊ ಗಾಳಿ ಮೋಹಬೀಜವ ತಂದು |ಬಿತ್ತಲಾರದೆ ಮನದಿ? - ಮಂಕುತಿಮ್ಮ ||
ಸತ್ತೆನೆಂದೆನಬೇಡ; ಸೋತೆನೆಂದೆನಬೇಡ |ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ||ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು |ಮತ್ತೆ ತೋರ್ಪುದು ನಾಳೆ - ಮಂಕುತಿಮ್ಮ ||
ಸತ್ಯ ಶಿವ ಸುಂದರದ ಸಚ್ಚಿದಾನಂದನದ |ಭಿತ್ತಿಯಲಿ ಬಣ್ಣಬಣ್ಣದ ಜೀವಚಿತ್ರ ||ನಿತ್ಯ ನೀನದ ನೆನೆದು ಚಿತ್ರದಲಿ ಮನವಿರಿಸೆ |ವೃತ್ತಿ ತನ್ಮಯವಹುದೊ - ಮಂಕುತಿಮ್ಮ ||
ಸತ್ಯವಂತನನರಸಲೆನುತ ಪೇಟೆಗಳೊಳಗೆ |ಹಟ್ಟಹಗಲೊಳೆ ದೀವಿಗೆಯ ಹಿಡಿದು ನಡೆದು ||ಕೆಟ್ಟುದೀ ಜಗವೆಂದು ತೊಟ್ಟಿಯೊಳೆ ವಸಿಸಿದನು |ತಾತ್ತ್ವಿಕ ಡಯೋಜೆನಿಸ್ - ಮಂಕುತಿಮ್ಮ ||
ಸತ್ಯವೆಂಬುದದೆಲ್ಲಿ? ನಿನ್ನಂತರಂಗದೊಳೊ |ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ ||ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ |ತತ್ತ್ವದರ್ಶನವಹುದು - ಮಂಕುತಿಮ್ಮ ||
ಸತ್ಯವೆಂಬುದದೇನು ಬ್ರಹ್ಮಾಂಡ ತಾಂಡವದಿ? |ನೃತ್ಯವೇ ಸತ್ಯವಲ ಕಡಲಲೆಯ ಬಾಳೊಳ್ ||ಮಿಥ್ಯೆಯೆಂಬುದೆ ಮಿಥ್ಯೆ; ಜೀವನಾಟಕ ಸತ್ಯ |ಕೃತ್ಯವಿದು ಬೊಮ್ಮನದು - ಮಂಕುತಿಮ್ಮ ||
ಸತ್ಯವೆಂಬುದದೇನು ಸೈನಿಕನ ಜೀವನದಿ? |ಕತ್ತಿಯವನಿಗೆ ಸತ್ಯವದರಿಂದ ಧರ್ಮ ||ಭುಕ್ತಿಸುಪ್ತಿಗಳ ವಿಭವಂಗಳವನಿಗೆ ಮಿಥ್ಯೆ |ಸಾರ್ಥಕತೆಯಿಂ ಸತ್ಯ - ಮಂಕುತಿಮ್ಮ ||
ಸತ್ಯಾನುಭವವೆಲ್ಲರಿಂಗಮೊಂದೆಂತಹುದು? |ಬೆಟ್ಟದಡಿಯೊಳಗೊಬ್ಬ; ಕೋಡಬಳಿಯೊಬ್ಬ ||ಎತ್ತರದ ದೃಶ್ಯ ಕಣಿವೆಯೊಳಿಹನಿಗಾದೀತೆ? |ನೇತ್ರದಂದದೆ ನೋಟ - ಮಂಕುತಿಮ್ಮ ||
ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ |ಇಂದು ನಂಬಿಹುದೆ ಮುಂದೆಂದುಮೆಂದಲ್ಲ ||ಕುಂದು ತೋರ್ದಂದದನು ತಿದ್ದಿಕೊಳೆ ಮನಸುಂಟು |ಇಂದಿಗೀ ಮತವುಚಿತ - ಮಂಕುತಿಮ್ಮ ||
ಸದ್ದು ಮಾಡದೆ ನೀನು ಜಗಕೆ ಬಂದವನಲ್ಲ |ಒದ್ದಾಟ ಗುದ್ದಾಟ ಬಾಳೆಲ್ಲವಾಯ್ತು ||ಗದ್ದಲವ ಬಿಡಲು ಕಡೆದಿನವಾನುಮಾದೀತೆ? |ನಿದ್ದೆವೊಲು ಸಾವ ಪಡೆ - ಮಂಕುತಿಮ್ಮ ||
ಸನ್ನಿಹಿತ ಮನುಜನಲಿ ದೈವಪಾಶವವೆರಡು |ಪುಣ್ಯ ಪಾಪದ ಮಿಶ್ರವವನ ಸ್ವಭಾವ ||ಕಣ್ಣೊಮ್ಮೆಯಾಗಸದ ಬೆಳಕಿನೊಡನಾಡುವುದು |ಮಣ್ಣೊಳುರುಳುವುದೊಮ್ಮೆ - ಮಂಕುತಿಮ್ಮ ||
ಸಂಪೂರ್ಣಗೋಳದಲಿ ನೆನೆದೆಡೆಯೆ ಕೇಂದ್ರವಲ |ಕಂಪಿಸುವ ಕೇಂದ್ರ ನೀಂ ಬ್ರಹ್ಮಕಂದುಕದಿ ||ಶಂಪಾತರಂಗವದರೊಳು ತುಂಬಿ ಪರಿಯುತಿದೆ |ದಂಭೋಳಿ ನೀನಾಗು - ಮಂಕುತಿಮ್ಮ ||
ಸಂಬಳದ ಹಂಬಲವೊ; ಡಾಂಬಿಕತೆಯಬ್ಬರವೊ |ಇಂಬು ಕೂರ್ಮೆಯ ಕರೆಯೊ; ಕರುಳ ಕರೆಕರೆಯೋ ||ತುಂಬಿಹುವು ಬಾಳಿನಲಿ ನೂರು ತಕರಾರುಗಳು |ಬೆಂಬಲವವೆಲೊ ಜಗಕೆ - ಮಂಕುತಿಮ್ಮ ||
ಸಮತೆಸಂಯಮಶಮಗಳಿಂ ಭವವನೋಲಗಿಸೆ |ಸಮನಿಪುದು ಮತಿಯ ಹದವಾತ್ಮಾನುಭವಕೆ ||ಮಮತೆಯಳಿವಿಂ ಜ್ಞಾನ; ಪಾಂಡಿತ್ಯದಿಂದಲ್ಲ |ಶ್ರಮಿಸಿಳೆಯ ಗಾಣದಲಿ - ಮಂಕುತಿಮ್ಮ ||